ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಸೂಚನೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಸಲಹೆ ನೀಡಿದ್ದಾರೆ. ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ರವಿವಾರ (ಮೇ.25) ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಮತ್ತೆ ಆರಂಭಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಯೇ ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.