ಮಂಗಳೂರು ಮೇ 02: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸುಹಾಸ್ ಹತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಾವು ಭದ್ರತೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೇವೆ. ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಂತ್ಯಕ್ರಿಯೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ಗುರುತು ಸಿಕ್ಕಿದ್ದು ಅವರನ್ನು ವಶಕ್ಕೆ ಪಡೆಯಲು ನಮ್ಮ ಪೊಲೀಸ್ ತಂಡ ಕೆಲಸ ಮಾಡುತ್ತಿದೆ ಎಂದು ಹಿತೇಂದ್ರ ಹೇಳಿದರು.ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್​ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Leave a Reply

Your email address will not be published. Required fields are marked *