ಬೆಂಗಳೂರು: ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿರುವುದಾಗಿ ವರದಿಯಾಗಿದೆ. ಮಡಿಕೇರಿ ಮೂಲದ ತುಫೈಲ್ ಬಂಧಿತ ಆರೋಪಿ. ಈ ಮೊದಲು ಎನ್.ಐ.ಎ ತಂಡ ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನಗಳನ್ನು ಕೂಡಾ ಘೋಷಿಸಿತು. ಈದೀಗ ಬೆಂಗಳೂರಿನ ದಾಸರಹಳ್ಳಿ ಎಂಬಲ್ಲಿ ಈತನನ್ನು ಎನ್‌ಐಎ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ ಎಂದು ಹೇಳಲಾಗಿದೆ. ಕಳೆದ ವರ್ಷ ಜುಲೈ 26 ರಂದು ರಾತ್ರಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕೊಲೆ ಮಾಡಲಾಗಿತ್ತು. ರಾಷ್ಟ್ರಮಟ್ಟದಲ್ಲಿ ಈ ಹತ್ಯೆ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಆರಂಭದಲ್ಲಿ ರಾಜ್ಯ ಪೊಲೀಸ್ ಇಲಾಖೆ ತನಿಖೆ ನಡೆಸಿ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿತ್ತು. ಬಳಿಕ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರ ಮಾಡಲಾಗಿದ್ದು ಎನ್ಐಎ ತನಿಖೆ ನಡೆಸುತ್ತಿದೆ.