ಸುಳ್ಯ: ಕೆಲ ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುರಿಯುವ ಸೂಚನೆ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು. 28 ರಂದು ರಜೆ ಘೋಷಿಸಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವಂತಹ ಮಾನ್ಯ ತಹಶೀಲ್ದಾರ್ ಈ ಆದೇಶ ಹೊರಡಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವಂತೆಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಈ ಮೂಲಕ ತಿಳಿಸಿದ್ದಾರೆ. ತಾಲೂಕು ಆಡಳಿತದಿಂದ ವಿವಿಧ ಪ್ರದೇಶಗಳಿಗೆ ವಹಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ತಹಶೀಲ್ದಾರ್ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸಂಬಂಧಪಟ್ಟ ಇಲಾಖಾಧಿಕಾರಿಗಳು ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕೆಂದು ಈ ಮೂಲಕ ಸೂಚಿಸಲಾಗಿದೆ.
Advertisement
Advertisement