ಮೈಸೂರು: ವಿಶ್ವ ಪ್ರಸಿದ್ದ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಅ.15) ಬೆಳಗ್ಗೆ 10.15ರಿಂದ 10.36ರ ನಡುವೆ ನಾದಬ್ರಹ್ಮ ಡಾ.ಹಂಸಲೇಖ ಅವರು ನಾಡದೇವಿ ಚಾಮುಂಡೇಶ್ವರಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಖ್ಯಾತ ಸಿನಿಮಾ ಸಾಹಿತಿ, ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಅವರು, ದಸರಾ ಮಹೋತ್ಸವ 2023 ರ ಉದ್ಘಾಟನೆಯನ್ನು ಅಕ್ಟೋಬರ್ 15 ರಂದು(ಭಾನುವಾರ) ಬೆಳಗ್ಗೆ 10.15 ರಿಂದ 10.36 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನ ದಲ್ಲಿ ನೆರವೇರಿಸಲಿದ್ದಾರೆ.

ಮೈಸೂರು ದಸರಾ ಮಹೋತ್ಸವ ಅ 24 ರಂದು ಮಂಗಳವಾರ ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಮೈಸೂರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅದೇ ದಿನ ಸಂಜೆ 4.40 ರಿಂದ 5.00 ರವರೆಗೆ‌ ಮೈಸೂರು ಅರಮನೆ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ನಾಡಹಬ್ಬ ದಸರಾ ಉತ್ಸವಕ್ಕೆ ನಾದಬ್ರಹ್ಮ ಡಾ.ಹಂಸಲೇಖ ಅವರು ಚಾಲನೆ ನೀಡುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ವಿತ್ತ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲ ಸೀತಾರಾಮನ್‌, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್, ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಉಪಸ್ಥಿತರಿರಲಿದ್ದಾರೆ.ಅದೇ ರೀತಿ, ಕರ್ನಾಟಕದ ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಎಚ್.ಕೆ.ಪಾಟೀಲ್‌, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಈಶ್ವರ ಖಂಡ್ರೆ, ಬಿ.ಎಸ್.ಸುರೇಶ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ನಾಳೆ (ಅ.15) ಸಂಜೆ 7 ಗಂಟೆಗೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ