ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ನೆಚ್ಚರಿಕೆ ಮುನ್ಸೂಚನೆ ನೀಡಲಾಗಿದ್ದು, ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಣೆ ಮಾಡಲಾಗಿದೆ. ಮಳೆ ಹಿನ್ನೆಲೆ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಿಂದಲೇ ಕೆಲಸ ನಿರ್ವಹಿಸಲು ಕೆಲವು ಕಂಪನಿಗಳು ಸೂಚಿಸಿದೆ.
ಸಾಧ್ಯವಾದರೆ ಆಫೀಸಿಗೆ ಬರಬಹುದು, ಇಲ್ಲವಾದಲ್ಲಿ ವರ್ಕ್ ಫ್ರಮ್ ಹೋಂ ಮಾಡುವಂತೆ ಸೂಚಿಸಲಾಗಿದೆ.
ಬೆಂಗಳೂರಿನಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಮನೆಗಳಲ್ಲಿ, ಬಡಾವಣೆಗಳಲ್ಲಿ ಇಂದು ಮಧ್ಯಾಹ್ನದಷ್ಟೊತ್ತಿಗೆ ನಿಂತ ನೀರನ್ನು ಹೊರ ಹಾಕುವ ಕೆಲಸವನ್ನು ಒಂದೆಡೆ ಬಿಬಿಎಂಪಿ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದರು. ಅಲ್ಲದೇ ಮಳೆ ನೀರಿನಿಂದ ಆವೃತಗೊಂಡಿರುವ ನಿವಾಸಿಗಳ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿರುವಾಗಲೇ ಮತ್ತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, . ಹಾವೇರಿ, ಬಳ್ಳಾರಿ , ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ ಕೊಪ್ಪಳ ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.