ಹೊಸದೆಹಲಿ: ಧರ್ಮಸ್ಥಳದ ಸಮೀಪದ ಉಜಿರೆಯಲ್ಲಿ 2012ರಲ್ಲಿ ನಡೆದಿದ್ದ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಸಮಗ್ರ ಮರುತನಿಖೆಗೆ ಆದೇಶಿಸಿದೆ.
ಪ್ರಕರಣದ ಮರುತನಿಖೆಗಾಗಿ ಅತ್ಯುನ್ನತ ತಂತ್ರಜ್ಞಾನ ಹೊಂದಿರುವ ಹಾಗೂ ದಕ್ಷ ಹಿರಿಯ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಹೊಸ ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಉನ್ನತ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ಈ ಹಿಂದೆ ಪ್ರಾಥಮಿಕ ತನಿಖೆ ಅಥವಾ ಸಿಬಿಐ ತನಿಖೆಯಲ್ಲಿ ಭಾಗಿಯಾಗಿದ್ದ ಯಾವುದೇ ಅಧಿಕಾರಿಗಳನ್ನು ಹೊಸ ಎಸ್ಐಟಿ ತಂಡಕ್ಕೆ ನೇಮಿಸುವಂತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ನೂತನ ತನಿಖಾ ತಂಡವು ಕೂಲಂಕಷವಾಗಿ ಮರುತನಿಖೆ ನಡೆಸಿ, ಬರುವ ಮೂರು ತಿಂಗಳ ಒಳಗಾಗಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಹಿಂದೆ ನಡೆದ ಸಿಬಿಐ ತನಿಖೆಯು ಅತ್ಯಂತ ಕಳಪೆಯಾಗಿದ್ದು, ಯಾವುದೇ ಸ್ವತಂತ್ರ ಹಾಗೂ ವೈಜ್ಞಾನಿಕ ತನಿಖೆ ನಡೆದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್ದೇವ್ ಅವರನ್ನೊಳಗೊಂಡ ಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ನಡೆಸಿದ ದೀರ್ಘಕಾಲದ ಕಾನೂನು ಹೋರಾಟದ ಫಲವಾಗಿ ಈಗ ಸುಪ್ರೀಂ ಕೋರ್ಟ್ ಮರುತನಿಖೆಗೆ ಹಸಿರು ನಿಶಾನೆ ತೋರಿದ್ದು, ಧರ್ಮಸ್ಥಳ ಕ್ಷೇತ್ರ ಹಾಗೂ ಸೌಜನ್ಯ ಪರ ಹೋರಾಟಗಾರರು ಈ ತೀರ್ಪನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಿದ್ದಾರೆ.
ಮರು ತನಿಖೆಗೆ ಸ್ವಾಗತ: ಕುಮಾರಿ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವ ಮಾನ್ಯ ಸುಪ್ರೀಂ ಕೋರ್ಟ್ನ ತೀರ್ಪನ್ನು ಶ್ರೀ ಕ್ಷೇತ್ರದ ಪರವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸಲಾಗಿದೆ.
ಅಪಪ್ರಚಾರದ ವಿರುದ್ಧ ಅಸಮಾಧಾನ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಯತ್ನಗಳನ್ನು ಮಾಡುತ್ತಾ ಬಂದಿವೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ನ್ಯಾಯ ಸಿಗಲಿ ಎಂಬ ಆಶಯ: ಮೃತ ಕುಮಾರಿ ಸೌಜನ್ಯಳಿಗೆ ಸೂಕ್ತ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ.
ತಾರ್ಕಿಕ ಅಂತ್ಯಕ್ಕೆ ಆಗ್ರಹ: ಸುಪ್ರೀಂ ಕೋರ್ಟ್ ಆದೇಶಿಸಿರುವ ಈ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕು, ಈ ಮೂಲಕ ಸೌಜನ್ಯ ಪ್ರಕರಣಕ್ಕೆ ಸೂಕ್ತ ತಾರ್ಕಿಕ ಅಂತ್ಯ ದೊರೆಯಬೇಕು ಎಂದು ಕ್ಷೇತ್ರವು ಆಶಿಸಿದೆ.
ಪ್ರಕರಣದ ಕುರಿತು ಸಾರ್ವಜನಿಕರಲ್ಲಿ ಇದ್ದ ಗೊಂದಲಗಳಿಗೆ ತೆರೆ ಎಳೆಯುವ ರೀತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಈ ಪ್ರಕಟಣೆ ಮೂಲಕ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
