ಸುಳ್ಯ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟವು ಸುಳ್ಯದ ದುಗ್ಗಲಡ್ಕ ಪ್ರೌಢಶಾಲಾ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ, ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ. ಎಂ. ಶಹೀದ್ ತೆಕ್ಕಿಲ್, “ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ಇಂದಿನ ವಿದ್ಯಾರ್ಥಿಗಳಲ್ಲಿ ಕ್ರೀಡಾ ಕ್ಷಮತೆಯನ್ನು ಕಾಯ್ದುಕೊಳ್ಳುವ ಸಾಮರ್ಥ್ಯ ಕ್ಷೀಣಿಸುತ್ತಿದ್ದು, ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಉಳಿಸಿಕೊಳ್ಳಲು ಉತ್ತಮ ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ” ಎಂದು ಕರೆ ನೀಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘಟನಾ ಸಮಿತಿಯ ಅಧ್ಯಕ್ಷೆ ಹಾಗೂ ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ, ತಾಲೂಕು ಗ್ಯಾರಂಟಿ ಸಮಿತಿಯ ಶಾಹುಲ್ ಹಮೀದ್ ಕುತ್ತಾಮೊಟ್ಟೆ, ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ, ಅಕ್ಷರ ದಾಸೋಹ ಯೋಜನೆಯ ಉಸ್ತುವಾರಿ ಅಧಿಕಾರಿ ಶ್ರೀಮತಿ ವೀಣಾ ಎಂ. ಡಿ., ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಾಬಿದಿರೆ ಹಾಗೂ ತುಳು ಕೂಟದ ಅಧ್ಯಕ್ಷ ಕೆ. ಟಿ. ವಿಶ್ವನಾಥ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಸ್ವಾಗತಿಸಿದರು. ಶ್ರೀಮತಿ ಸುಜಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಧನಂಜಯ ಮೆರ್ಕಜೆ ಮತ್ತು ಹರಿಪ್ರಸಾದ್ ಕೊಯಿಂಗಾಜೆ ಕಾರ್ಯಕ್ರಮ ನಿರೂಪಿಸಿದರು.
