ಮಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ದಿನಗಳಲ್ಲಿ ಮಂಗಳೂರು, ಪುತ್ತೂರು, ಸುಳ್ಯ ಸೇರಿದಂತೆ ಕರಾವಳಿ ಭಾಗಕ್ಕೆ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಇಲ್ಲಿನ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದರು. ಅವರ ಅಪಾರ ತ್ಯಾಗ ಮತ್ತು ಬಲಿದಾನದಿಂದಾಗಿಯೇ ನಮಗೆ ಇಂದು ಸ್ವಾತಂತ್ರ್ಯ ಲಭಿಸಿದೆ ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಸ್ಮರಿಸಿದರು.
ನಗರದ ಕ್ಲಾಕ್ ಟವರ್ ಬಳಿಯ ರಾಜಾಜಿ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೆಲವರು ಗಾಂಧೀಜಿಯವರ ಕೊಡುಗೆಯನ್ನು ಮರೆತು ಅವರ ವಿರುದ್ಧ ಅಪಪ್ರಚಾರ ಮತ್ತು ದೂಷಣೆ ಮಾಡುತ್ತಿರುವುದು ದುರದೃಷ್ಟಕರ. ಮಹಾತ್ಮ ಗಾಂಧೀಜಿಯವರ ಸಿದ್ಧಾಂತ ಹಾಗೂ ತತ್ವಗಳನ್ನು ಶೇ. 100ರಷ್ಟು ಪಾಲಿಸಲು ಸಾಧ್ಯವಾಗದಿದ್ದರೂ, ಅವರ ಬದುಕಿನ ಒಂದಿಷ್ಟು ಆದರ್ಶಗಳನ್ನಾದರೂ ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಕುರಿತಾದ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಇಂಗ್ಲಿಷ್ ಆವೃತ್ತಿಯ ಪುಸ್ತಕವನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಬಿಡುಗಡೆ ಮಾಡಿದರೆ, ಕನ್ನಡ ಆವೃತ್ತಿಯ ಪುಸ್ತಕವನ್ನು ಟಿ.ಎಂ. ಶಾಹಿದ್ ತೆಕ್ಕಿಲ್ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಎಸಿಪಿ ಹಾಗೂ ಪ್ರೊಬೇಷನರಿ ಐಎಎಸ್ ಅಧಿಕಾರಿಗಳು ಉಪಸ್ಥಿತರಿದ್ದರು.


