ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಮಂಗಳೂರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ದ.ಕ. ಜಿಲ್ಲೆ, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸುಳ್ಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ಬೃಹತ್ ಉದ್ಯೋಗ ಮೇಳವು ನಡೆಯಿತು.
ಕರ್ನಾಟಕ ಸರ್ಕಾರದ ಕಾರ್ಮಿಕ ಕನಿಷ್ಠ ವೇತನ ಸಮಿತಿ ಅಧ್ಯಕ್ಷ (ಸಚಿವ ಸ್ಥಾನಮಾನ) ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ದೀಪ ಬೆಳಗಿ ಉದ್ಯೋಗ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪಂಚ ಗ್ಯಾರಂಟಿ ಮೂಲಕ ಗ್ರಾಮೀಣ ಭಾಗದ ಜನರ ಆಶೋತ್ತರಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ. ಸರ್ಕಾರದ ನೇತೃತ್ವದ ವಿವಿಧ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳನ್ನು ಕರೆಯಲಾಗಿದೆ, ಯುವ ಸಮೂಹ ಇದರ ಸದುಪಯೋಗಪಡಿಸಿಕೊಳ್ಳಬೇಕು. ಇಂದು ಸುಳ್ಯದಲ್ಲೇ ಉದ್ಯೋಗ ಮೇಳವನ್ನು ಆಯೋಜಿಸಿ, ಮನೆ ಬಾಗಿಲಿಗೆ ಬಂದು ಉದ್ಯೋಗ ಕೊಡುವ ಕೆಲಸವನ್ನು ಗ್ಯಾರಂಟಿ ಸಮಿತಿ ಮಾಡಿದೆ” ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಗ್ಯಾರಂಟಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ವಹಿಸಿ ಮಾತನಾಡಿ, “ಸುಳ್ಯದಲ್ಲಿ ಒಂದು ಹೊಸ ಪ್ರಯೋಗ ಮಾಡಲು ಕೈಹಾಕಿದ್ದೇವೆ. ಉದ್ಯೋಗ ಪಡೆಯಲು ಹಲವು ಮಂದಿ ಎದುರು ನೋಡುತ್ತಿದ್ದು, ಅವರಿಗೆ ಅನುಕೂಲವಾಗಲೆಂದು ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ” ಎಂದರು.
ಮೇಳದಲ್ಲಿ 38ಕ್ಕೂ ಅಧಿಕ ಕಂಪನಿಗಳು ಆಗಮಿಸಿದ್ದು, ಸಂಜೆ 4 ಗಂಟೆಯವರೆಗೆ ಆಸಕ್ತ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ವಿವಿಧ ಕ್ಷೇತ್ರಗಳ ನೂರಾರು ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಉತ್ಸಾಹದಿಂದ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಪ್ರಾಧಿಕಾರ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ್ ನೇತೃತ್ವ ವಹಿಸಿದ್ದರು. ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಜೋಜಾ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ರಂಜಿತ್ ರೈ ಮೇನಾಳ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರು ಮತ್ತು ವಿವಿಧ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಿರುಮಲೇಶ್ವರಿ ಅರ್ಬಡ್ಕ ಪ್ರಾರ್ಥಿಸಿ, ಐ.ಬಿ. ರಾಜಣ್ಣ ಸ್ವಾಗತಿಸಿದರು.
