ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ತಾರಾ ಬ್ಯಾಟರ್ ಕೆ.ಎಲ್. ರಾಹುಲ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಅವರು ಕೇವಲ 67 ಎಸೆತಗಳಲ್ಲಿ ಅಜೇಯ 152 ರನ್ ಸಿಡಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಭಾರತೀಯ ಆಟಗಾರನೊಬ್ಬ ಗಳಿಸಿದ ಅತಿ ಹೆಚ್ಚು ವೈಯಕ್ತಿಕ ರನ್ ಎಂಬ ಹೊಸ ದಾಖಲೆ ಬರೆದಿದ್ದಾರೆ.

ಆರಂಭದಿಂದಲೇ ಪಂಜಾಬ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ರಾಹುಲ್, ಕೇವಲ 47 ಎಸೆತಗಳಲ್ಲಿ ತಮ್ಮ 6ನೇ ಐಪಿಎಲ್ ಶತಕ ಪೂರೈಸಿದರು. ಈ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದವರ ಪಟ್ಟಿಯಲ್ಲಿ ದಿಗ್ಗಜ ಕ್ರಿಸ್ ಗೇಲ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಅವರು ತಮ್ಮ ಈ ಅಮೋಘ ಇನಿಂಗ್ಸ್‌ನಲ್ಲಿ 16 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದರು. ಈ ಹಿಂದೆ 141 ರನ್ ಗಳಿಸಿದ್ದ ಅಭಿಷೇಕ್ ಶರ್ಮಾ ಅವರ ದಾಖಲೆ ಇದೀಗ ಪತನವಾಗಿದೆ.
ಕೆ.ಎಲ್. ರಾಹುಲ್ ಅವರ ಈ ಸಿಡಿಲಬ್ಬರದ ಆಟ ಮತ್ತು ನಿತೀಶ್ ರಾಣಾ ಅವರ ಬಿರುಸಿನ ಸಾಥ್‌ನಿಂದ ದೆಹಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 264 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದು ಪ್ರಸಕ್ತ ಋತುವಿನ ತಂಡವೊಂದರ ಗರಿಷ್ಠ ಮೊತ್ತವೂ ಹೌದು.




