ಸುಳ್ಯ: ನಗರದ ರಸ್ತೆಯ ಇಕ್ಕೆಲಗಳಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಅಳವಡಿಕೆ ಕಾಮಗಾರಿಯ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ತಮ್ಮ ಮಗುವಿನೊಂದಿಗೆ ಫುಟ್‌ಪಾತ್ ಮೇಲೆ ಬಿದ್ದು ಗಾಯಗೊಂಡ ಘಟನೆ ಡಿ.29 ರಂದು ನಡೆದಿದೆ.

ಇಲ್ಲಿನ ರಸ್ತೆ ಬದಿಯಲ್ಲಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯು ತೀರಾ ಅವ್ಯವಸ್ಥಿತವಾಗಿ ಸಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಿರ್ಲಕ್ಷ್ಯದಿಂದ ಫುಟ್‌ಪಾತ್ ಮೇಲೆಯೇ ಕಲ್ಲುಗಳಿದ್ದು, ಪಾದಚಾರಿಗಳಿಗೆ ಸಂಚರಿಸಲು ಕಷ್ಟಕರವಾಗಿದೆ. ಈ ವೇಳೆ ಮಹಿಳೆಯೊಬ್ಬರು ಮಗುವನ್ನು ಎತ್ತಿಕೊಂಡು ಹೋಗುತ್ತಿದ್ದಾಗ ಕಲ್ಲು ಮೇಲೆ ಪಾದವಿಡುವ ಸಂಧರ್ಭದಲ್ಲಿ ಆಯತಪ್ಪಿ ಬಿದ್ದಿದ್ದಾರೆ. ಈ ಘಟನೆಯ ವೀಡಿಯೋ ದೃಶ್ಯಾವಳಿಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ಎಚ್ಚರಿಕೆ ಫಲಕವಿಲ್ಲ, ಜನರ ಆಕ್ರೋಶ:

ಕಾಮಗಾರಿ ನಡೆಯುವ ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನಾಗಲೀ ಅಥವಾ ಎಚ್ಚರಿಕೆ ಫಲಕಗಳನ್ನಾಗಲೀ ಅಳವಡಿಸಿಲ್ಲ ಎಂಬುದು ಸ್ಥಳೀಯರ ದೂರು. ರಸ್ತೆಯ ಸ್ಥಿತಿಯೂ ಹದಗೆಟ್ಟಿದ್ದು, ಪ್ರತಿನಿತ್ಯ ಇಲ್ಲಿ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ, ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

Leave a Reply

Your email address will not be published. Required fields are marked *