ಕಸ್ತೂರಿ ರಂಗನ್ ವರದಿ ಭೀತಿ: ವಿಧಾನಸೌಧದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ ಟಿ.ಎಂ. ಶಾಹಿದ್ ತೆಕ್ಕಿಲ್

News


ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಯಿಂದ ಸುಳ್ಯ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ರೈತರ ಕೃಷಿ ಭೂಮಿ, ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ತೀವ್ರ ತೊಂದರೆಯಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸಿದರು.
ಕೇರಳ ಸರ್ಕಾರವು ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ವೇಳೆ ಜನವಸತಿ ಹಾಗೂ ಕೃಷಿ ಭೂಮಿಯನ್ನು ಪರಿಸರ ಸೂಕ್ಷ್ಮ ವಲಯದಿಂದ ಹೊರಗಿಡಲು ತೆಗೆದುಕೊಂಡಿರುವ ಮಾದರಿಯನ್ನೇ ಕರ್ನಾಟಕದಲ್ಲೂ ಅನುಸರಿಸಬೇಕು ಮತ್ತು ರೈತರ, ಕೃಷಿಕರ ಹಾಗೂ ಜನವಸತಿ ಪ್ರದೇಶಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ವರದಿಯ ವ್ಯಾಪ್ತಿಯಿಂದ ಸಂಪೂರ್ಣವಾಗಿ ಹೊರಗಿಡಬೇಕೆಂದು ಅವರು ಸಚಿವರಿಗೆ ಮನವಿ ಮಾಡಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು ಯಾವುದೇ ಆತಂಕ ಬೇಡವೆಂದು ಭರವಸೆ ನೀಡಿದ್ದಾರೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಆ ಸಂದರ್ಭದಲ್ಲಿ ಸ್ಥಳೀಯ ರೈತರು ಮತ್ತು ವಿವಿಧ ಸಂಘ-ಸಂಸ್ಥೆಗಳ ಮುಖಂಡರನ್ನು ನೇರವಾಗಿ ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಮುಂದಿನ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *