ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದು, ಬೊಳ್ಳೂರು ಅವರು ಫೆಬ್ರವರಿ 16 ರಂದು ಮಧ್ಯಾಹ್ನ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವರ್ಷದ ಗೊಂದಲಕ್ಕೆ ತೆರೆ:
ಈ ನೇಮಕಾತಿಯೊಂದಿಗೆ ಕಳೆದ ಒಂದು ವರ್ಷದಿಂದ ಸುಳ್ಯ ಕಾಂಗ್ರೆಸ್ ವಲಯದಲ್ಲಿದ್ದ ರಾಜಕೀಯ ಹೈಡ್ರಾಮಕ್ಕೆ ತೆರೆ ಬಿದ್ದಂತಾಗಿದೆ. ಕಳೆದ ವರ್ಷ ಫೆಬ್ರವರಿ 15ರಂದೇ ರಾಧಾಕೃಷ್ಣ ಬೊಳ್ಳೂರು ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಸ್ಥಳೀಯ ಕೆಲವು ನಾಯಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನೇಮಕಾತಿಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಬಳಿಕ ಕೆಪಿಸಿಸಿ ಉಪಸಮಿತಿಯು ಸುಳ್ಯ ಮತ್ತು ಮಂಗಳೂರಿನಲ್ಲಿ ಸಭೆ ನಡೆಸಿ, ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡಿತ್ತು. ಈ ವರದಿಯ ಆಧಾರದ ಮೇಲೆ ಈಗ ಅಧಿಕೃತವಾಗಿ ನೇಮಕಾತಿ ಆದೇಶ ಪ್ರಕಟಗೊಂಡಿದೆ.
ರಾಜಕೀಯ ಹಿನ್ನೆಲೆ:
ಡಿಸಿಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಧಾಕೃಷ್ಣ ಬೊಳ್ಳೂರು ಅವರು ಹಿರಿಯ ಮುಖಂಡರಾಗಿದ್ದು, ಈ ಹಿಂದೆ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ, ಎಪಿಎಂಸಿ ಉಪಾಧ್ಯಕ್ಷರಾಗಿ, ಅಮರ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ ಹಾಗೂ ಕೆಡಿಪಿ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಕೆಲವು ವರ್ಷಗಳ ಹಿಂದೆ ಕಾಂಗ್ರೆಸ್ ನಾಯಕತ್ವದೊಂದಿಗೆ ಮುನಿಸಿಕೊಂಡು ಬಿಜೆಪಿ ಸೇರ್ಪಡೆಗೊಂಡಿದ್ದ ಇವರು, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿದ್ದರು. ಆದರೆ ಮೂರು ವರ್ಷಗಳ ಹಿಂದೆ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.
ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪಿ.ಸಿ. ಜಯರಾಮ ಅವರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ನೂತನ ನೇಮಕಾತಿ ನಡೆದಿದೆ.




