ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 80 ದಿನಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿ ಬಿ (RCB) ಭಾವುಕ ಪೋಸ್ಟ್ ಹಂಚಿಕೊಂಡಿದೆ.
ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.

ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್ಸಿಬಿ ಪ್ರತಿ ಕುಟುಂಬಕ್ಕೆ ತಲಾ ₹25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.

ಇದು ಆರ್ಸಿಬಿ ಕೇರ್ಸ್ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ.
ಆರ್ಸಿಬಿ ಕೇರ್ಸ್ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ… ಎಂದು ಟ್ವೀಟ್ ಮಾಡಿದೆ.