ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್ 12) ನಡೆದ ಐಪಿಎಲ್ 2026ರ ಹೈ-ಸ್ಕೋರಿಂಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 18 ರನ್ಗಳ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ನಲ್ಲಿ ಅಬ್ಬರಿಸಿದ ಆರ್ಸಿಬಿ, ಮುಂಬೈಗೆ ತವರಿನಲ್ಲಿಯೇ ಸತತ ಮೂರನೇ ಸೋಲಿನ ರುಚಿ ತೋರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಅವರ ಸ್ಫೋಟಕ 78 ರನ್ (36 ಎಸೆತ), ರಜತ್ ಪಾಟಿದಾರ್ ಅವರ ಮಿಂಚಿನ 53 ರನ್ (20 ಎಸೆತ) ಮತ್ತು ವಿರಾಟ್ ಕೊಹ್ಲಿ (50 ರನ್) ಅವರ ಜವಾಬ್ದಾರಿಯುತ ಅರ್ಧಶತಕಗಳ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 240 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಕೊನೆಯಲ್ಲಿ ಟಿಮ್ ಡೇವಿಡ್ ಕೂಡ ಕೇವಲ 16 ಎಸೆತಗಳಲ್ಲಿ 34 ರನ್ ಸಿಡಿಸಿ ತಂಡದ ಮೊತ್ತವನ್ನು 240ರ ಗಡಿ ದಾಟಿಸಿದರು. ಮುಂಬೈ ಬೌಲರ್ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆದರೂ ರನ್ ನಿಯಂತ್ರಿಸಲು ಪರದಾಡಿದರು.
241 ರನ್ಗಳ ಕಠಿಣ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 222 ರನ್ ಗಳಿಸಲಷ್ಟೇ ಶಕ್ತವಾಯಿತು. ಶೇರ್ಫೇನ್ ರುದರ್ಫೋರ್ಡ್ ಕೇವಲ 31 ಎಸೆತಗಳಲ್ಲಿ 9 ಸಿಕ್ಸರ್ ಸಹಿತ ಅಜೇಯ 71 ರನ್ ಚಚ್ಚಿ ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲಾಗಲಿಲ್ಲ. ನಾಯಕ ಹಾರ್ದಿಕ್ ಪಾಂಡ್ಯ (40 ರನ್) ಮತ್ತು ಸೂರ್ಯಕುಮಾರ್ ಯಾದವ್ (33 ರನ್) ಉತ್ತಮ ಆರಂಭ ಪಡೆದರೂ ವಿಕೆಟ್ ಒಪ್ಪಿಸಿದರು. ರೋಹಿತ್ ಶರ್ಮಾ 19 ರನ್ ಗಳಿಸಿ ನಿರಾಸೆ ಮೂಡಿಸಿದರು.
ಆರ್ಸಿಬಿ ಪರ ಸುಯಶ್ ಶರ್ಮಾ 2 ವಿಕೆಟ್ ಪಡೆದು ಮಿಂಚಿದರೆ, ಕೃಣಾಲ್ ಪಾಂಡ್ಯ ಮತ್ತು ರಸಿಖ್ ಸಲಾಮ್ ತಲಾ ಒಂದೊಂದು ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಗೆಲುವಿನೊಂದಿಗೆ ಆರ್ಸಿಬಿ ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.




